ಕಾರ್ಕಳ : ಮಾರ್ಚ್ 05: ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಿಲೀಪ್ ಹೆಗ್ಡೆ (28) ಜಾಮೀನು ಅರ್ಜಿಯನ್ನು ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಂಚಾರಿ ಪೀಠ ತಿರಸ್ಕರಿಸಿದೆ.
ನ್ಯಾಯಾಂಗ ಬಂಧನದಲ್ಲಿರುವ ದಿಲೀಪ್ ಹೆಗ್ಡೆ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ ಅವರು ಆರೋಪಿಯ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿರುವ ಗಂಭೀರ ಅಂಶಗಳನ್ನು ಪರಿಗಣಿಸಿ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ.
ಈ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಪ್ರತಿಮಾ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಮಾ. 10ಕ್ಕೆ ದಿನಾಂಕ ನಿಗದಿಪಡಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದರು.
ಘಟನೆ: 2024ರ ಅ. 20ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ಬಾಲಕೃಷ್ಣ ಪೂಜಾರಿ (44) ಅವರನ್ನು ಅವರ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಕೊಲೆ ಮಾಡಲಾಗಿತ್ತು. ಈ ಕೃತ್ಯಕ್ಕೆ ಸಂಬಂಧಿಸಿ ಆರೋಪಿಗಳನ್ನು ಅ. 25ರಂದು ಅಜೆಕಾರು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು.