ಉಡುಪಿ:ಜುಲೈ13:ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಪಂಚ ಗ್ಯಾರಂಟಿಗಳನ್ನು ಘೋಷಿಸಿ ನಂತರ ಬಂದ ಕೂಡಲೇ ಕೆಲ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿತ್ತು. ಅದರಲ್ಲಿ ಮುಖ್ಯವಾದದ್ದು ಶಕ್ತಿ ಯೋಜನೆ. ಇದೀಗ ಶಕ್ತಿ ಯೋಜನೆ ಮೂಲಕ 500 ಕೋಟಿ ಬಾರಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಸಂಭ್ರಮಾಚರಣೆಗೆ ಸರ್ಕಾರ ಮುಂದಾಗಿದೆ.
ಉಡುಪಿ ಯಲ್ಲಿ ಜು.14ರಂದು ನಗರದ ಬನ್ನಂಜೆಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ತಿಳಿಸಿದ್ದಾರೆ.
ಶಕ್ತಿ ಯೋಜನೆಯಡಿ ನಾಡಿನ ಹೆಣ್ಣು ಮಕ್ಕಳು ರಾಜ್ಯದ ಸರಕಾರಿ ಸ್ವಾಮ್ಯದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹೆಗ್ಗಳಿಕೆಯ ಸಂಭ್ರಮವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಹಾಗೂ ತಾಲೂಕು ಸಮಿತಿ ಆಚರಿಸುತ್ತಿವೆ.
ಈ ಹಿನ್ನೆಲೆಯಲ್ಲಿ ಶಕ್ತಿ ಯೋಜನೆಯಡಿಯಲ್ಲಿ 500 ಕೋಟಿ ಫಲಾನುಭವಿ ಗಳು ಪ್ರಯಾಣ ಮಾಡಿರುವುದರ ಸಂಕೇತವಾಗಿ ಜು.14ರಂದು ಸೋಮವಾರ ಬೆಳಗ್ಗೆ 9:00 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಹಾಗೂ ತಾಲೂಕುಗಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಸಮಿತಿಯ ಸದಸ್ಯರು ಒಂದು ಬಸ್ಸಿಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಗುಲಾಬಿ ಹೂವು ಹಾಗೂ ಸಿಹಿ ಹಂಚುವುದರೊಂದಿಗೆ ಆಚರಿಸಲಿದ್ದಾರೆ
ಅದರಂತೆ ಉಡುಪಿ ಜಿಲ್ಲೆಯ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಉಡುಪಿ ಬನ್ನಂಜೆಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಪೂಜೆ ಹಾಗೂ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಿಸ ಲಾಗುವುದು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು, ಸದಸ್ಯರು, ವಿವಿಧ ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸಲಿದ್ದಾರೆ ಎಂದು ಅಶೋಕ್‌ಕುಮಾರ್ ಕೊಡವೂರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.