ಕಾರ್ಕಳ, ಜುಲೈ 14: ಪರಶುರಾಮ ಥೀಂ ಪಾರ್ಕ್ ವಿವಾದಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ದೋಷಾರೋಪ ಪಟ್ಟಿಯಲ್ಲಿ ಪರಶುರಾಮ ಪ್ರತಿಮೆಯನ್ನು “ಹಿತ್ತಾಳೆ”ಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಪೊಲೀಸರು 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಕಾರ್ಕಳದ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದರಲ್ಲಿ ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡದೇ, ಹಿತ್ತಾಳೆ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡಿರುವುದು ತಜ್ಞರ ಪರಿಶೀಲನಾ ವರದಿಯಿಂದ ಹಾಗೂ ತನಿಖೆಯಿಂದ ಸಾಬೀತಾಗಿದೆ ಎಂದು ಇದೆ.
ಒಪ್ಪಂದದ ಪ್ರಕಾರ ಪ್ರತಿಮೆಯನ್ನು ಕಂಚಿನಿಂದ ನಿರ್ಮಿಸಬೇಕೆಂದಿದೆ. ಆದರೆ ಪ್ರತಿಮೆ ಹಿತ್ತಾಳೆಯದ್ದಾಗಿದೆ.
ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ ಡೈರೆಕ್ಟರ್ ಅರುಣ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ಇವರುಗಳು ಅಪರಾಧಿಕ ಒಳಸಂಚು ಮತ್ತು ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ, ಸಾಕ್ಷಿ ನಾಶ ಮಾಡಿದ್ದಾರೆ ಎಂದು ಪೊಲೀಸರು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಇವರ ವಿರುದ್ಧ ಕಲಂ. 420, 409, 201, 120 (ಬಿ) ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.