ನವದೆಹಲಿ: ಜುಲೈ 25: ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ ಭೀಕರ ಘಟನೆ ನಡೆದಿದೆ. ಶುಕ್ರವಾರ ಪಿಪ್ಲೋಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಮಕ್ಕಳು ದುರ್ಮರಣಕ್ಕೊಳಗಾಗಿ, ಹಲವು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಘಟನೆ ವೇಳೆ ಶಾಲೆಯೊಳಗೆ 40ಕ್ಕೂ ಹೆಚ್ಚು ಮಕ್ಕಳು ಇದ್ದರು. ಅವರಲ್ಲಿ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಮತ್ತು ಅಧಿಕಾರಿಗಳು ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಆಗಮಿಸಿವೆ.
ಅವಶೇಷಗಳಡಿ ಸಿಲುಕಿರುವ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆಯುವ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಗಾಯಾಳು ಮಕ್ಕಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಗೆ ಸಂಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ತುರ್ತಾಗಿ ಸಭೆ ನಡೆಸಿದೆ.
ಹತ್ತು ಮಕ್ಕಳನ್ನು ಝಾಲಾವರ್‌ಗೆ ಕಳುಹಿಸಲಾಗಿದೆ, ಅದರಲ್ಲಿ ಮೂರರಿಂದ ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ಝಾಲಾವರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.ಈ ಘಟನೆ ಕುರಿತು ಹೆಚ್ಚಿನ ವಿವರಗಳು ಇನ್ನು ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.







