ಬೆಂಗಳೂರು:ಸೆಪ್ಟೆಂಬರ್ 11:ಕನ್ನಡ ಚಿತ್ರರಂಗದ ಕಲಾವಿದರಾದ ಡಾ. ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ವಿಷ್ಣುವರ್ಧನ್ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಅದೇ ರೀತಿ ಬಿ. ಸರೋಜಾದೇವಿ ಕೂಡ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದರು. ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ನೀಡಬೇಕು ಎಂಬುದು ಕುಟುಂಬದವರ ಮತ್ತು ಅಭಿಮಾನಿಗಳ ಮನವಿ ಆಗಿತ್ತು. ಇಂದು (ಸೆಪ್ಟೆಂಬರ್ 11) ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ.
ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಅಲ್ಲದೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು.
1972ರಲ್ಲಿ ವಿಷ್ಣುವರ್ಧನ್ ಅವರು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಆ ವರ್ಷ ಅವರು ನಟಿಸಿದ ‘ವಂಶವೃಕ್ಷ’, ‘ನಾಗರಹಾವು’ ಸಿನಿಮಾಗಳು ಬಿಡುಗಡೆ ಆದವು. ಬಳಿಕ ಕನ್ನಡ ಚಿತ್ರರಂಗದಲ್ಲಿ ಅವರು ಭರವಸೆಯ ನಟನಾಗಿ ಬೆಳೆದರು. ಹಲವು ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡರು. ಅಭಿಮಾನಿಗಳ ಪಾಲಿಗೆ ‘ಸಾಹಸ ಸಿಂಹ’ ಎನಿಸಿಕೊಂಡರು. ಚಿತ್ರರಂಗದಲ್ಲಿ ಅವರು ಮಾಡಿದ ಸಾಧನೆಯನ್ನು ಗುರುತಿಸಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗಿದೆ.








