ಬೆಂಗಳೂರು:ಅಕ್ಟೋಬರ್ 24:ಆಂಧ್ರ ಪ್ರದೇಶದ ಕರ್ನೂಲ್ ಸಮೀಪ ಅಗ್ನಿ ದುರಂತದಿಂದ ಖಾಸಗಿ ಬಸ್ ಸುಟ್ಟು ಕರಕಲಾಗಿದ್ದು, ಘಟನೆಯಲ್ಲಿ ಬೆಂಗಳೂರಲ್ಲಿ ನೆಲೆಸಿದ್ದ ಕುಟುಂಬ ಸೇರಿ 20 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇಂದು ಬೆಳಗಿನ ಜಾವ ಸಂಭವಿಸಿದ ಅನಾಹುತದಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ಗೊಳ್ಳ ರಮೇಶ್ ಕುಟುಂಬ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ.
41 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಮೊದಲು ಬೈಕ್ ಗೆ ಡಿಕ್ಕಿಯಾಗಿದ್ದು, ಆ ಬಳಿಕ ಬಸ್ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕೆಲವರು ಹೊರಹಾರಿ ಪ್ರಾಣ ಉಳಿಸಿಕೊಂಡಿದ್ದರೆ ಹಲವರು ಬೆಂಕಿ ಕೆನ್ನಾಲೆಗೆ ಸಿಲುಕಿ ಜೀವ ಕಳೆದುಕೊಂಡಿದ್ದಾರೆ.
ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದು, ಬಸ್ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.








