ಮಂಗಳೂರು: ಅಕ್ಟೋಬರ್ 25:ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ ನಾಲ್ಕೈದು ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ನವೆಂಬರ್ ಮೊದಲ ವಾರದವರೆಗೂ ಇದರ ಪ್ರಭಾವ ಇರಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಾದ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ ಮತ್ತು ಸುರತ್ಕಲ್‌ಗಳಲ್ಲಿ ಶುಕ್ರವಾರ ಮಧ್ಯಾಹ್ನದ ನಂತರ ಮಳೆಯ ಅಬ್ಬರ ಹೆಚ್ಚಾಗಿತ್ತು. ಇದರಿಂದಾಗಿ ಕೆಲವು ಕಡೆಗಳಲ್ಲಿ ಕೃಷಿ ಹಾಗೂ ತೋಟಗಳಿಗೆ ಹಾನಿಯಾಗಿದ್ದರೆ, ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮೀನುಗಾರಿಕೆ ಇಲಾಖೆ ಅಕ್ಟೋಬರ್ 26ರ ವರೆಗೆ ಪ್ರವಾಸಿಗರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಸ್ಪಷ್ಟವಾಗಿ ಸೂಚಿಸಿದೆ.
ಅದೇ ರೀತಿ, ಪ್ರತಿಕೂಲ ಹವಾಮಾನದ ಕಾರಣ ಅ. 26ರ ವರೆಗೆ ಮೀನುಗಾರರು ಕೂಡ ಸಮುದ್ರಕ್ಕೆ ಇಳಿಯದಂತೆ ಅ. 23ರಂದೇ ಸುತ್ತೋಲೆ ಹೊರಡಿಸಿದೆ. ಈಗಾಗಲೇ ಸುರತ್ಕಲ್ ಭಾಗದಲ್ಲಿ ಮೀನುಗಾರರು ಕೆಲವು ದಿನಗಳಿಂದ ಮೀನುಗಾರಿಕೆಗೆ ತೆರಳುವುದನ್ನು ನಿಲ್ಲಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಸುರತ್ಕಲ್ ಲೈಟ್ ಹೌಸ್ ಬೀಚ್ ಬಳಿ ಕರಾವಳಿ ರಕ್ಷಣಾ ಪಡೆ ಪೊಲೀಸರು ಮತ್ತು ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮಳೆಗಾಲದ ಸಂದರ್ಭದಲ್ಲಿ ಸೆ. 30ರ ವರೆಗೆ ಇದ್ದ ನಿಯಮದಂತೆಯೇ ಈಗಲೂ ಪ್ರವಾಸಿಗರು ಎಲ್ಲೆಂದರಲ್ಲಿ ಸಮುದ್ರಕ್ಕೆ ಇಳಿಯುವಂತಿಲ್ಲ. ಮೀನುಗಾರಿಕಾ ದೋಣಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ,” ಎಂದು ಸಿಬ್ಬಂದಿ ತಿಳಿಸಿದ್ದಾರೆ. ಮಳೆಗಾಲದಂತೆ ಸಮುದ್ರ ಅಬ್ಬರಿಸುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.








