ಉಡುಪಿ: ನವೆಂಬರ್ 22: ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗುವುದು ಖಚಿತವಾಗಿದ್ದು , ಶನಿವಾರ ಪ್ರಧಾನ ಮಂತ್ರಿಯವರ ಕಾರ್ಯಾಲಯ ಅಧಿಕೃತ ವೇಳಾ ಪಟ್ಟಿ ಪ್ರಕಟಿಸಿದೆ.
ಪ್ರಧಾನ ಮಂತ್ರಿ ಕಾರ್ಯಾಲಯದಿಂದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಹೆಲಿಪ್ಯಾಡ್ ಸೇರಿ ಕಾರ್ಯಕ್ರಮಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಳಿಸಲು ಸೂಚಿಸಲಾಗಿದೆ.
ಕಾರ್ಯಕ್ರಮ ಆಯೋಜಕರಿಗೆ ಭದ್ರತಾ ವಿಚಾರಕ್ಕೆ ಸಂಬಂಧಿಸಿ ಎಸ್ ಪಿಜಿ ಅಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಬೆಳಗ್ಗೆ 8. 15ಕ್ಕೆ ದೆಹಲಿ ವಿಮಾನ ನಿಲ್ದಾಣದಿಂದ ವಾಯುಪಡೆಯ ವಿಮಾನದಲ್ಲಿ ಹೋರಟು 11. 05 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ. 11.10 ಕ್ಕೆ ಹೆಲಿಕ್ಯಾಪ್ಟರ್ ಮೂಲಕ 11.35 ಕ್ಕೆ ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಇಳಿಯಲಿದ್ದಾರೆ.
12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಬಳಿಕ ಲಕ್ಷ ಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗಿಯಾಗಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
1.30 ಕ್ಕೆ ಮಠದಿಂದ ಹೊರಟು 1.45 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ 2.15 ಕ್ಕೆ ಗೋವಾದ ದಾಬೋಲಿಮ್ ವಿಮಾನ ನಿಲ್ದಾಣಕ್ಕೆ ವಿಮಾನದಲ್ಲಿ ತೆರಳಿ ಗೋಕರ್ಣ ಪರ್ತಗಾಳಿ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.








