ನವದೆಹಲಿ, ಜ. 28: ನವದೆಹಲಿಯಲ್ಲಿ ಮನಕಲಕುವ ಘಟನೆೊಂದು ಬೆಳಕಿಗೆ ಬಂದಿದೆ. ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ ಆರು ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿತರು 10, 13 ಹಾಗೂ 14 ವರ್ಷದ ವಯಸ್ಸಿನವರಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮೂರನೇ ಬಾಲಕ ಪರಾರಿಯಾಗಿದ್ದಾನೆ. ಅಲ್ಲದೆ, ಪರಾರಿಯಾದ ಆರೋಪಿಯ ಕುಟುಂಬವೂ ನಾಪತ್ತೆಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
ಈ ಘಟನೆ ಜನವರಿ 18 ರ ಮಂಗಳವಾರ ನಡೆದಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಂತರ ಹುಡುಗಿಯ ಕುಟುಂಬವು ಪೊಲೀಸರಿಗೆ ದೂರು ನೀಡಿತ್ತು. ಮೂವರು ಹುಡುಗರು ಹುಡುಗಿಯನ್ನು ಆಮಿಷವೊಡ್ಡಿ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಗಳನ್ನು ಗುರುತಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಒಬ್ಬ ಪರಾರಿಯಾಗಿದ್ದಾನೆ. ಇಬ್ಬರು ಆರೋಪಿಗಳನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದ್ದು, ಅಗತ್ಯ ಆರೈಕೆ ಮತ್ತು ಸಮಾಲೋಚನೆ ಒದಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಮೂರನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.
ಮೂರನೇ ಆರೋಪಿಯನ್ನು ಪತ್ತೆ ಹಚ್ಚಲು ಶೋಧ ತಂಡವನ್ನು ರಚಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಶೀಘ್ರದಲ್ಲೇ ಮೂರನೇ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ದೇಶದಲ್ಲಿ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ವಿರುದ್ಧ ಕಠಿಣ ಕಾನೂನುಗಳಿವೆ, ಆದರೂ ಈ ಅಪರಾಧಗಳು ನಿರಂತರವಾಗಿ ನಡೆಯುತ್ತಿವೆ ಎಂಬುದು ಗಮನಿಸಬೇಕಾದ ಸಂಗತಿ.






