ಬೆಂಗಳೂರು, ಜನವರಿ 30:ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಅವರು ಬೆಂಗಳೂರಿನ ಹೊಸೂರು ರಸ್ತೆಯ ಲ್ಯಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆನೇಕಲ್‌ನ ನಾರಾಯಣ ಆಸ್ಪತ್ರೆಗೆ ರವಾನಿಸಲಾಗಿದೆ. ಡಿಸಿಪಿ ಅಕ್ಷಯ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
ಪೊಲೀಸ್ ಮೂಲಗಳ ಪ್ರಕಾರ, ಇಂದು ಬೆಳಿಗ್ಗೆ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಮಧ್ಯಾಹ್ನ ಕಚೇರಿಗೆ ಬಂದ ಸಿ.ಜೆ. ರಾಯ್ ಅವರು ಸುಮಾರು ಒಂದು ಗಂಟೆ ಕಾಲ ಐಟಿ ಅಧಿಕಾರಿಗಳ ವಿಚಾರಣೆಗೆ ಒಳಗಾಗಿದ್ದರು. ಕೆಲ ದಾಖಲೆಗಳನ್ನು ಅಧಿಕಾರಿಗಳಿಗೆ ಒಪ್ಪಿಸಿದ ಬಳಿಕ, ಮತ್ತಷ್ಟು ದಾಖಲೆ ತರಲು ಕೊಠಡಿಗೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಸಿ.ಜೆ. ರಾಯ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಸ್ಥಳದಿಂದ ಬಳಸಿದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ಕಚೇರಿಯ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಡೆತ್ ನೋಟ್, ಮೊಬೈಲ್ ಸಂದೇಶಗಳು ಅಥವಾ ಇತರ ಯಾವುದೇ ಸುಳಿವುಗಳಿರುವ ಕುರಿತು ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಕೇರಳ ಮೂಲದ ಸಿ.ಜೆ. ರಾಯ್ ಅವರು 1997ರಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಆರಂಭಿಸಿ, ನಂತರ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಪ್ರವೇಶಿಸಿದ್ದರು. ಸಣ್ಣ ಮಟ್ಟದಲ್ಲಿ ಆರಂಭವಾದ ಅವರ ಉದ್ಯಮ, ಕಾಲಕ್ರಮೇಣ ಕಾನ್ಫಿಡೆಂಟ್ ಗ್ರೂಪ್ ಎಂಬ ದೊಡ್ಡ ಸಂಸ್ಥೆಯಾಗಿ ಬೆಳೆಯಿತು. ಸದ್ಯ ಕಂಪನಿಗೆ ಸುಮಾರು ಸಾವಿರ ಎಕರೆಗೂ ಅಧಿಕ ಭೂಸ್ವತ್ತು ಇದ್ದುದಾಗಿ ತಿಳಿದುಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತನಿಖೆಯ ನಂತರ ತಿಳಿದುಬರಬೇಕಿದೆ.





