ಬೆಳ್ತಂಗಡಿ,ಫೆ. 09: ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಪ್ರದೇಶದಲ್ಲಿ, ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಘಟನೆ ನಡೆದಿದೆ. ಆದರೆ ವಿದ್ಯಾರ್ಥಿನಿಯ ಧೈರ್ಯ ಮತ್ತು ಸಮಯಪ್ರಜ್ಞೆಯಿಂದ ಭಾರಿ ಅಪಾಯವೊಂದು ತಪ್ಪಿದೆ.
ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿಯಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎಂದಿನಂತೆ ಸೋಮವಾರ ಬೆಳಿಗ್ಗೆ 8:30ರ ಸುಮಾರಿಗೆ ತನ್ನ ಸ್ಕೂಟರ್‌ನಲ್ಲಿ ಸಂತೆಕಟ್ಟೆ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಸ್ಕೂಟರ್ ಅನ್ನು ಅಡ್ಡಗಟ್ಟಿದ್ದಾರೆ. ಕಾರಿನ ನಂಬರ್ ಪ್ಲೇಟ್‌ಗೆ ಬಟ್ಟೆ ಕಟ್ಟಲಾಗಿತ್ತು ಎಂದು ತಿಳಿದುಬಂದಿದೆ.
ಕಾರಿನಿಂದ ಇಳಿದ ಬಂದ ವ್ಯಕ್ತಿಗಳು ಬಾಲಕಿಯನ್ನು ಬಲವಂತವಾಗಿ ಕಾರಿನೊಳಗೆ ಎಳೆಯಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಬಾಲಕಿ ಜೋರಾಗಿ ಕಿರುಚಾಡುತ್ತಾ ತೀವ್ರ ಪ್ರತಿರೋಧ ಒಡ್ಡಿದ್ದಾಳೆ. ಅಷ್ಟರಲ್ಲಿ ಅದೇ ರಸ್ತೆಯಲ್ಲಿ ಹಿಂಭಾಗದಿಂದ ಮತ್ತೊಂದು ಸ್ಕೂಟರ್ ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಗಾಬರಿಗೊಂಡಿದ್ದಾರೆ. ಹೋಗುವ ಭರದಲ್ಲಿ ಚೂರಿಯಿಂದ ಬಾಲಕಿಯ ಕೈ ಹಾಗೂ ಬೆರಳಿಗೆ ಇರಿದು, ಆಕೆಯ ಕಾಲೇಜು ಬ್ಯಾಗ್ ಕಿತ್ತುಕೊಂಡು ಕಾರಿನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣವೇ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಆಗಮಿಸಿ ವಿದ್ಯಾರ್ಥಿನಿ ಬಳಿಯಿಂದ ಮಾಹಿತಿ ಪಡೆದುಕೊಂಡು ತನಿಖೆ ಚುರುಕುಗೊಳಿಸಿದ್ದಾರೆ







