ಉಳ್ಳಾಲ, ಮಾ. 3: ಬಜ್ಜೆಯಲ್ಲಿ ಕೊಲೆಯಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಭಾವಚಿತ್ರ ಹೊಂದಿದ್ದ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.
‘ಶಂಕರ್11916’ ಎಂಬ ಖಾತೆಯಲ್ಲಿ “ಸಪೋರ್ಟ್ ಮಾಡಿ, ಉಳ್ಳಾಲ ಮಸೀದಿ ಹತ್ತಿರ ಬಾಂಬ್ ಬ್ಲಾಸ್ಟ್ ಮಾಡ್ತೀನಿ” ಎಂಬ ಪ್ರಚೋದನಕಾರಿ ಕಾಮೆಂಟ್ ಪ್ರಕಟವಾಗಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸೋಮವಾರ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣೆ ಕರ್ತವ್ಯದಲ್ಲಿದ್ದ ಉಳ್ಳಾಲ ಪೊಲೀಸ್ ಠಾಣೆಯ ಸಿಬ್ಬಂದಿ ಸಂತೋಷ್ ದೊಡ್ಡಮನಿ ಈ ಪೋಸ್ಟ್ ಗಮನಿಸಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಆರೋಪಿಯು ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಸಿ, ಹಿಂಸೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಈ ರೀತಿಯ ಕಾಮೆಂಟ್ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಂಬಂಧಿಸಿದ ವ್ಯಕ್ತಿಯನ್ನು ಗುರುತಿಸಿ ಬಂಧಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ಕಠಿಣ ಕ್ರಮಕ್ಕೆ ಖಾದರ್ ಆಗ್ರಹ
ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಈ ಘಟನೆಯ ಕುರಿತು ಪೊಲೀಸ್ ಕಮಿಷನರ್ ಜೊತೆ ಮಾತುಕತೆ ನಡೆಸಿ, ಇಂತಹ ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಉಳ್ಳಾಲದಲ್ಲಿ ಎಲ್ಲ ಧರ್ಮದ ಜನರು ಸೌಹಾರ್ದದಿಂದ ಬದುಕುತ್ತಿರುವ ಹಿನ್ನೆಲೆಯಲ್ಲಿ ಕೋಮುಸೌಹಾರ್ದ ಕದಡುವ ಪ್ರಯತ್ನಗಳನ್ನು ತಡೆಯಲು ಪೊಲೀಸ್ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.







