ಮಂಗಳೂರು, ಮಾ.05: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಕುರಿತು ನಡೆಯುತ್ತಿರುವ ಚರ್ಚೆಗಳ ಹಿನ್ನೆಲೆ, ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆ ಘೋಷಣೆಗೆ ಅನುಸರಿಸಿರುವ ಮಾನದಂಡಗಳು ಹಾಗೂ ಕ್ರಮಗಳ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ನೇಮಿಸಿದ್ದ ಸಮಿತಿಯು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ ಆರು ಸದಸ್ಯರ ಅಧ್ಯಯನ ಸಮಿತಿಯನ್ನು ಸರ್ಕಾರ ರಚಿಸಿತ್ತು.
ಸಮಿತಿ ಜ.19 ಮತ್ತು 20ರಂದು ಆಂಧ್ರಪ್ರದೇಶ ರಾಜ್ಯದ ಸಚಿವಾಲಯ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆ ಹಾಗೂ ಕಚೇರಿಗಳಿಗೆ ಭೇಟಿ ನೀಡಿ, ಅಲ್ಲಿನ ಉರ್ದು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂದರ್ಭದಲ್ಲಿ ಅನುಸರಿಸಲಾದ ಮಾನದಂಡಗಳು, ಕಾನೂನು ಕ್ರಮಗಳು ಮತ್ತು ಆಡಳಿತಾತ್ಮಕ ವಿಧಾನಗಳ ಬಗ್ಗೆ ಮಾಹಿತಿ ಸಂಗ್ರಹಿಸಿತು. ಈ ಅಧ್ಯಯನದ ಆಧಾರದಲ್ಲಿ ಸಮಗ್ರ ವರದಿಯನ್ನು ಸಿದ್ಧಪಡಿಸಲಾಯಿತು.
ಸಮಿತಿಯ ಸದಸ್ಯರು ವಿಕಾಸಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಜೆ. ಮಂಜುನಾಥ್ ಅವರಿಗೆ ವರದಿಯನ್ನು ಅಧಿಕೃತವಾಗಿ ಹಸ್ತಾಂತರಿಸಿದರು. ಜೊತೆಗೆ ತುಳು ಭಾಷೆಯ ಇತಿಹಾಸ, ಹಿನ್ನೆಲೆ ಹಾಗೂ ಅದರ ಪ್ರಾಮುಖ್ಯತೆಯ ಕುರಿತ ಪ್ರಸ್ತಾವನೆಯನ್ನು ಸಹ ವರದಿಯೊಂದಿಗೆ ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಡಾ. ಬಿ.ಎಸ್. ಮಂಜುನಾಥ ಸ್ವಾಮಿ, ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಅಧ್ಯಯನ ಸಮಿತಿ ಸದಸ್ಯರಾದ ಸುಧಾಕರ ಶೆಟ್ಟಿ, ಕಾನೂನು ಇಲಾಖೆಯ ಉಪ ಕಾರ್ಯದರ್ಶಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಮೂರ್ತಿ ಕೆ.ಎನ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಎಂ. ಶುಭಶ್ರೀ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಉಪಸ್ಥಿತರಿದ್ದರು.






