ಮಂಗಳೂರು, ಮಾ. 18: ರಾಜ್ಯಾದ್ಯಂತ ಇಂದಿನಿಂದ ಆರಂಭಗೊಳ್ಳುತ್ತಿರುವ ಎಸೆಸೆಲ್ಸಿ ಪರೀಕ್ಷೆಗಳ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಸಿದ್ಧತೆ ಕೈಗೊಳ್ಳಲಾಗಿದೆ. ಈ ಬಾರಿ ಜಿಲ್ಲೆಯ 29,397 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ.
ಜಿಲ್ಲೆಯ 91 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 524 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು, ಒಟ್ಟು 1,298 ಕೊಠಡಿಗಳು ಸಿದ್ಧವಾಗಿವೆ. ಪರೀಕ್ಷೆ ನಿರ್ವಹಣೆಗೆ 2,428 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮಂಗಳವಾರವೇ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, ನೋಂದಣಿ ಸಂಖ್ಯೆಗಳ ಅಂಟಿಕೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಸಮರ್ಪಕವಾಗಿ ಮಾಡಲಾಗಿದೆ. ಪರೀಕ್ಷೆಗಳು ಏಪ್ರಿಲ್ 2ರವರೆಗೆ ನಡೆಯಲಿವೆ.
ಪರೀಕ್ಷಾ ಪ್ರಕ್ರಿಯೆ ಪಾರದರ್ಶಕವಾಗಿರಲು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಶೇಷ ವ್ಯವಸ್ಥೆ
ಪಡುವಾ ಪರೀಕ್ಷಾ ಕೇಂದ್ರದಲ್ಲಿ ವಿಶೇಷ ಅಗತ್ಯವಿರುವ ವಿದ್ಯಾರ್ಥಿಯೊಬ್ಬರಿಗೆ ಪಾಲಕರ ಮನವಿಯ ಮೇರೆಗೆ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಡಿಡಿಪಿಐ ಶಶಿಧರ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆ
ಉಡುಪಿ ಜಿಲ್ಲೆಯಲ್ಲಿ 14,151 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗಿದ್ದು, ಅಧೀಕ್ಷಕರು, ಮೇಲ್ವಿಚಾರಕರು, ಜಾಗೃತಿ ದಳ, ಮೊಬೈಲ್ ಸ್ವಾಧೀನ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಫೋನ್ ಹಾಗೂ ಸ್ಮಾರ್ಟ್ ವಾಚ್‌ಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಬಸ್ ಸೌಲಭ್ಯ
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಪರೀಕ್ಷಾರ್ಥಿಗಳಿಗೆ ಕೆಎಸ್ಸಾರ್ಟಿಸಿ ಮೂಲಕ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವೇಶ ಪತ್ರ ತೋರಿಸಿ ಬಸ್‌ನಲ್ಲಿ ಪ್ರಯಾಣಿಸಬಹುದಾಗಿದ್ದು, ಪರೀಕ್ಷಾ ಕೇಂದ್ರಗಳ ಸಮೀಪವೇ ಬಸ್ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.







