ಉಡುಪಿ:ಮೇ 28: ಪಶ್ಚಿಮ ಬಂಗಾಳ ಮೂಲದ ಚಿನ್ನದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಪಶ್ಚಿಮ ಬಂಗಾಳ ರಾಜ್ಯದ ಸುಕುಮಾರ್ ಪತ್ರ (49) ಎಂದು ಗುರುತಿಸಲಾಗಿದೆ. ಇವರು ಕಳೆದ 3-4 ವರ್ಷಗಳಿಂದ ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಕಡಿಯಾಳಿಯಲ್ಲಿ ಬಂಗಾಳ ಮೂಲದ ತರುಣ್ ಎಂಬವರೊಂದಿಗೆ ಚಿನ್ನದ ಕೆಲಸ ಮಾಡಿಕೊಂಡು ಅಲ್ಲೇ ವಾಸವಾಗಿದ್ದರು ಎನ್ನಲಾಗಿದೆ.
ಸುಕುಮಾರ್ ಪತ್ರ ಅವರಿಗೆ ರಕ್ತದೊತ್ತಡ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ದು, ಈ ಸಂಬಂಧ ಔಷಧಿಗಳನ್ನು ಸೇವಿಸುತ್ತಿದ್ದರು. ಮೇ 26 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಡಿಯಾಳಿ ಸಮೀಪದ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿಯಲ್ಲಿದ್ದರು.
ಆದರೆ ಅದೇ ದಿನ ರಾತ್ರಿ ಮತ್ತೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಬಳಿಕ ಮೇ 27 ರಂದು ಮುಂಜಾನೆ 3 ಗಂಟೆ ಸುಮಾರಿಗೆ ಅವರನ್ನು ಚಿಕಿತ್ಸೆಗೆ ಉಡುಪಿ ಸಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಪರೀಕ್ಷಿಸಿದ ವೈದ್ಯರು ಬೆಳಿಗ್ಗೆ 3:24 ಗಂಟೆಗೆ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯಂತೆ ಸುಕುಮಾರ್ ಪತ್ರ ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







