ಭಾರತೀಯ ಜನಸಂಘದ ಸಂಸ್ಥಾಪಕ ಡಾ| ಶ್ಯಾಮಪ್ರಸಾದ್ ಮುಖರ್ಜಿ ಹಾಗೂ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಶ್ರಮ ಮತ್ತು ಆದರ್ಶಗಳ ಕಾರಣದಿಂದ ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯು ಈ ಮಟ್ಟಕ್ಕೆ ಬೆಳೆದು ನಿಲ್ಲಲು ಸಾಧ್ಯವಾಗಿದೆ. ಡಾ| ಮುಖರ್ಜಿ ಅವರ ಜೀವನಾದರ್ಶಗಳು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ನಿರಂತರ ಪ್ರೇರಣೆ ಹಾಗೂ ಶಕ್ತಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದ್ದಾರೆ.
ಅವರು ಭಾರತೀಯ ಜನಸಂಘದ ಸಂಸ್ಥಾಪಕ ಡಾ| ಶ್ಯಾಮಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಯೋಜಿಸಲಾಗಿದ್ದ “ಸ್ಮರಣ ಪಾಕ್ಷಿಕ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಾದ್ಯಂತ ಜೂನ್ 23ರಿಂದ ಜುಲೈ 6ರ ವರೆಗೆ ಡಾ| ಮುಖರ್ಜಿ ಅವರ ಸ್ಮರಣಾರ್ಥ ‘ಸ್ಮರಣ ಪಾಕ್ಷಿಕ’ ಚಾಲ್ತಿಯಲ್ಲಿದ್ದು, ಜುಲೈ 6ರಂದು ಜಿಲ್ಲೆಯ ಎಲ್ಲಾ ಮಂಡಲಗಳ ಕಛೇರಿಗಳಲ್ಲಿ ಹಾಗೂ 1,112 ಬೂತ್‌ಗಳಲ್ಲಿ ಡಾ| ಶ್ಯಾಮಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ದಿನಾಚರಣೆಯ ಅಂಗವಾಗಿ ಡಾ| ಮುಖರ್ಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಸ್ಮರಣೆ ಹಾಗೂ ವೃಕ್ಷಾಪರೋಹಣ ಕಾರ್ಯಕ್ರಮ ನಡೆಯಲಿದೆ.
ಅನರ್ಹ ಮತದಾರರ ಪತ್ತೆಗೆ ಕಟ್ಟುನಿಟ್ಟಿನ ಸೂಚನೆ: ಇದೇ ಸಂದರ್ಭದಲ್ಲಿ ಪಕ್ಷದ ಸಾಂಘಿಕ ಕೆಲಸಕಾರ್ಯಗಳ ಕುರಿತು ಕಾರ್ಯಕರ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧ್ಯಕ್ಷರು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಕಡ್ಡಾಯವಾಗಿ ವಿಮರ್ಶೆ ನಡೆಸುವ ಕಾರ್ಯವಾಗಬೇಕು. ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅನರ್ಹರು ಮತದಾರರ ಪಟ್ಟಿಯೊಳಗೆ ಸೇರ್ಪಡೆಯಾಗದಂತೆ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಪಾಲ್ಗೊಂಡಿದ್ದ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಣ್ಯಪಾಲ್ ಅವರು ಡಾ| ಶ್ಯಾಮಪ್ರಸಾದ್ ಮುಖರ್ಜಿ ಅವರ ಜೀವನ ಮತ್ತು ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಗಳ ಕುರಿತು ಸವಿಸ್ತಾರವಾಗಿ ಉಪನ್ಯಾಸ ನಡೆಸಿಕೊಟ್ಟರು.
ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಜಿಲ್ಲಾ ಉಪಾಧ್ಯಕ್ಷ ಹಾಗೂ ‘ಸ್ಮರಣ ಪಾಕ್ಷಿಕ’ ಜಿಲ್ಲಾ ಸಂಚಾಲಕ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ ಹಾಗೂ ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ವಿಜಯ್ ಭಟ್ ಕಡೆಕಾರ್ ವಂದೇ ಮಾತರಂ ಹಾಡಿದರು. ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕೊಡವೂರು ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ವಂದಿಸಿದರು.






