ಕಾರ್ಕಳ: ಪ್ರಧಾನಮಂತ್ರಿ ಆವಾಸ್ ಯೋಜನೆ–ಸರ್ವರಿಗೂ ಸೂರು (HFA) ಯೋಜನೆಯಡಿ ಕಾರ್ಕಳ ಪುರಸಭೆ ವ್ಯಾಪ್ತಿಯ ಪತ್ತೊಂಜಿಕಟ್ಟೆ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಹಾಗೂ ಸ್ವಂತ ಮನೆ ಇಲ್ಲದ ಬಾಡಿಗೆ ನಿವಾಸಿಗಳಿಗೆ ಮತ್ತು ನಿವೇಶನ ರಹಿತರಿಗೆ ಗುಂಪು ಮನೆಗಳನ್ನು ನಿರ್ಮಿಸಲಾಗುತ್ತಿದೆ.
ಕರ್ನಾಟಕ ಸರ್ಕಾರದ ಕೊಳಗೇರಿ ಅಭಿವೃದ್ಧಿ ಮಂಡಳಿ, ಬೆಂಗಳೂರು ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಈ ಯೋಜನೆಯಲ್ಲಿ G+2 ಮಾದರಿಯ ಸುಮಾರು 295.85 ಚದರ ಅಡಿ ವಿಸ್ತೀರ್ಣದ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅನುಸೂಚಿತ ಜಾತಿ, ಅನುಸೂಚಿತ ಪಂಗಡ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯೊಂದಿಗೆ ಬ್ಯಾಂಕ್ ಉಳಿತಾಯ ಖಾತೆ ವಿವರ, ಜಾತಿ-ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು ಹಾಗೂ ಪತಿ/ಪತ್ನಿಯ ಆಧಾರ್ ಪ್ರತಿ ಮತ್ತು ಭಾವಚಿತ್ರವನ್ನು ಲಗತ್ತಿಸಿ ಕಾರ್ಕಳ ಪುರಸಭೆ ಕಚೇರಿಗೆ ಕೂಡಲೇ ಸಲ್ಲಿಸುವಂತೆ ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಕಾರ್ಕಳ ಪುರಸಭೆಯ ವಸತಿ ವಿಭಾಗವನ್ನು ಸಂಪರ್ಕಿಸಬಹುದಾಗಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








