ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಬ್ರಹ್ಮಾವರದಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ಹಾಗೂ ಜಾಗೃತಿ ಜಾಥಾ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಮತಿ ಮುಕ್ತಾ ಬಾಯಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಿ, ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು. ಪ್ರತಿಯೊಬ್ಬರೂ ಸ್ವತಃ ಜಾಗೃತರಾಗುವುದರ ಜೊತೆಗೆ ತಮ್ಮ ಸುತ್ತಮುತ್ತಲಿನವರಲ್ಲೂ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ಹೊತ್ತು, ಉತ್ತಮ ನಾಗರಿಕ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಶ್ರೀ ಹರೀಶ್ ಜಿ ಮಾತನಾಡಿ, ದೇಶದ ಅಭಿವೃದ್ಧಿಗೆ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವುದು ಅತ್ಯಗತ್ಯವಾಗಿದೆ. ಕಾನೂನು ಜಾರಿಯಲ್ಲಿದ್ದರೂ ಸಮಾಜ ವಿರೋಧಿ ಶಕ್ತಿಗಳು ಯುವಜನರನ್ನು ತಪ್ಪು ದಾರಿಗೆಳೆಯುತ್ತಿರುವುದು ಆತಂಕಕಾರಿ. ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ತಕ್ಷಣ ಮಾಹಿತಿ ನೀಡಿ, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಡಾ. ಬೊಮ್ಮಯ್ಯ ಎಂ. ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಯುವಜನರಲ್ಲಿ ಅರಿವು ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಉತ್ತಮ ಚಿಂತನೆ ಹಾಗೂ ಉತ್ತಮ ಜೀವನಶೈಲಿಯ ಮೂಲಕ ವ್ಯಕ್ತಿ ಮತ್ತು ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕುಮಾರಿ ಆಶ್ರಿತ ಶೆಟ್ಟಿ ಅವರು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಗಣ್ಯರು, ಸಿಬ್ಬಂದಿ ಹಾಗೂ ಸಂಸ್ಥೆಯ ಶಿಬಿರಾರ್ಥಿಗಳು ಬ್ರಹ್ಮಾವರ ರುಡ್ಸೆಟ್ ಸಂಸ್ಥೆಯಿಂದ ಕೃಷಿ ವಿಜ್ಞಾನ ಕೇಂದ್ರದವರೆಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾ ನಡೆಸಿದರು.

ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ಚೈತ್ರ ಕೆ. ನಿರೂಪಿಸಿದರು. ಕಚೇರಿ ಸಹಾಯಕ ಶ್ರೀ ಶಾಂತಪ್ಪ ಸ್ವಾಗತಿಸಿ, ಹಿರಿಯ ಕಚೇರಿ ಸಹಾಯಕ ಶ್ರೀ ರವಿ ವಂದಿಸಿದರು.






