ಕಾರ್ಕಳ: ಸಾಣೂರು ಗ್ರಾಮದ ಪುಲ್ಕೇರಿ ವಿಶಾಲ್ ಬಸ್ ಗ್ಯಾರೇಜ್ ಎದುರು ರಾಜ್ಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಟಿಪ್ಪರ್ ಚಾಲಕ ಮೃತಪಟ್ಟ ಘಟನೆ ಸೆ.25ರ ತಡರಾತ್ರಿ ನಡೆದಿದೆ.
ಸೆ.25ರ ರಾತ್ರಿ 11.30ರಿಂದ ಸೆ.26ರ 2.30ರ ಮಧ್ಯೆ ಸುಧಾಕರ ಎಂಬವರು ತಮ್ಮ ಟಿಪ್ಪರ್ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಮೂತ್ರ ವಿಸರ್ಜನೆಗಾಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಚಾಲಕನು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿಕೊಂಡು ಬಂದು ಅವರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಡಿಕ್ಕಿಯ ಪರಿಣಾಮ ಗಂಭೀರವಾಗಿ ಗಾಯಗೊಂಡ ಸುಧಾಕರ ಅವರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ವಾಹನ ಚಾಲಕ ಸ್ಥಳದಲ್ಲಿ ವಾಹನ ನಿಲ್ಲಿಸದೆ, ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯದೆ ಹಾಗೂ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಕಳಸ ತಾಲೂಕಿನ ಮಾವಿನಕೆರೆ ಗ್ರಾಮದ ಎಡ್ರಗೋಡು ನಿವಾಸಿ ಸುಮಂತ್ (28) ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







