ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಆರೋಪದ ಮೇಲೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಸೆ.29ರಂದು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ತಿಮ್ಮೇಶ್ ಬಿ.ಎನ್. ಅವರಿಗೆ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಗೋಡಾನ್ ಬಳಿ ಅಂದರ್-ಬಾಹರ್ ಜುಗಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಜುಗಾರಿ ಆಡುತ್ತಿದ್ದ ಮಲ್ಲಿಕಾರ್ಜುನ ಬಸವನಗೌಡ, ಭರತ್ ಕುಮಾರ್ ಬಿ.ಎಚ್., ವಸಂತ ಕೋಟ್ಯಾನ್, ಜಗದೀಶ ಮಲ್ಲಪ್ಪ ಕಟಾಪುರ, ಅಮೀತ್ ಬಿ. ಹಾಗೂ ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಜುಗಾರಿ ಆಟಕ್ಕೆ ಬಳಸಿದ್ದ ₹6,690 ನಗದು ಹಾಗೂ ಇಸ್ಪೀಟ್ ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 160/2026ರಂತೆ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.






