ಮಂಗಳೂರು: ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟ ಹಾಗೂ ಬೆಂಕಿ ಅವಘಡ ಪ್ರಕರಣದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿರುವುದು ದೃಢಪಟ್ಟಿದೆ. ಘಟನಾ ಸ್ಥಳದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಮುಲ್ಕಿ ಮೂಲದ 30 ವರ್ಷದ ಮನೀಶ್ ಕರ್ಕಡ ಎಂದು ಗುರುತಿಸಲಾಗಿದೆ. ಅವರು ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಆಧಾರದಡಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೋರ್ವರಿಗೆ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿವೆ. ಇನ್ನು 8 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಸ್ಫೋಟದ ಹಿನ್ನೆಲೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಪ್ರಮುಖ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಹಲವು ಕಟ್ಟಡಗಳು ಹಾಗೂ ಮನೆಗಳಿಗೆ ಹಾನಿಯಾಗಿರುವುದಾಗಿ ತಿಳಿದುಬಂದಿದೆ.
ಜೋಕಟ್ಟೆ ಈದ್ಗಾ ಮಸೀದಿ, ಪೇಜಾವರ ಚರ್ಚ್, ಸೇಂಟ್ ಜೋಸೆಫ್ ಕಾಳಾವರ ಚರ್ಚ್ ಹಾಗೂ ಜೋಕಟ್ಟೆಯ ಮತ್ತೊಂದು ಮಸೀದಿಗೂ ಹಾನಿಯಾಗಿರುವುದಾಗಿ ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮನೆಗಳು ಕಂಪಿಸಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ಕುರಿತು ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದು, ಸ್ಫೋಟಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.






