ಕಾರ್ಕಳ: ರಾಜ್ಯ ಸರ್ಕಾರದ ವಿವಿಧ ನೀತಿಗಳು ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲದ ವತಿಯಿಂದ ಅಕ್ಟೋಬರ್ 5ರಂದು ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನಾ ಧರಣಿ ನಡೆಯಲಿದೆ.
ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.
BPL ಪಡಿತರ ಚೀಟಿ ರದ್ದು, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶದ ಕೊರತೆ, 94C ಹಾಗೂ ಬಗರ್‌ಹುಕುಂ ಅಕ್ರಮ-ಸಕ್ರಮ ಅರ್ಜಿಗಳ ತಿರಸ್ಕಾರ, ಸಾಮಾಜಿಕ ಭದ್ರತಾ ಪಿಂಚಣಿ, ಇ-ಸ್ವತ್ತು, ಖಾತಾ, ಏಕವಿನ್ಯಾಸ ಅನುಮೋದನೆ, ವಿದ್ಯುತ್ ದರ ಏರಿಕೆ ಹಾಗೂ ವಿದ್ಯುತ್ ಕಡಿತ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪ್ರತಿಭಟನೆಯಲ್ಲಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಾರ್ಕಳ ತಾಲೂಕಿನಲ್ಲಿ 1,000ಕ್ಕೂ ಅಧಿಕ BPL ಕಾರ್ಡ್‌ಗಳು ರದ್ದಾಗಿರುವುದು, 10,090ಕ್ಕೂ ಅಧಿಕ ಅಕ್ರಮ-ಸಕ್ರಮ ಅರ್ಜಿಗಳು ತಿರಸ್ಕೃತವಾಗಿರುವುದು ಹಾಗೂ 10,732ಕ್ಕೂ ಅಧಿಕ ಸಾಮಾಜಿಕ ಭದ್ರತಾ ಪಿಂಚಣಿ ಪ್ರಕರಣಗಳು ಜನರಲ್ಲಿ ಆತಂಕಕ್ಕೆ ಕಾರಣವಾಗಿವೆ ಎಂದು ನವೀನ್ ನಾಯಕ್ ಹೇಳಿದ್ದಾರೆ.
ಗ್ರಾಮೀಣ ರಸ್ತೆ ಅಭಿವೃದ್ಧಿ, ಮೂಲಸೌಕರ್ಯ, ಬಡವರ ವಸತಿ ಹಾಗೂ ವಿವಿಧ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆಯೂ ಪ್ರತಿಭಟನೆಯಲ್ಲಿ ಧ್ವನಿ ಎತ್ತಲಾಗುವುದು. ಇದು ಕೇವಲ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯಲ್ಲ, ಸರ್ಕಾರದ ವಿವಿಧ ನಿರ್ಧಾರಗಳಿಂದ ಸಮಸ್ಯೆ ಎದುರಿಸುತ್ತಿರುವ ಬಡವರು, ರೈತರು, ಫಲಾನುಭವಿಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಹೋರಾಟವಾಗಿದೆ ಎಂದು ಅವರು ತಿಳಿಸಿದ್ದಾರೆ.
ಅ.5ರಂದು ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಕಚೇರಿ ಮುಂಭಾಗ ನಡೆಯಲಿರುವ ಪ್ರತಿಭಟನೆಯಲ್ಲಿ ಸಾರ್ವಜನಿಕರು, ರೈತರು, ಫಲಾನುಭವಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನವೀನ್ ನಾಯಕ್ ಮನವಿ ಮಾಡಿದ್ದಾರೆ.






