ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಜೆ.ಬಿ. ಕೊಕನಟ್ ಇಂಡಸ್ಟ್ರೀಸ್ ಆವರಣದಲ್ಲಿ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ಅಕ್ಟೋಬರ್ 27, 2026ರಂದು ಸಂಜೆ 5:30ರ ಸುಮಾರಿಗೆ ಈ ಘಟನೆ ನಡೆದಿದೆ. ಇಂಡಸ್ಟ್ರೀಸ್ ಹೊರಗಡೆ ನಿಲ್ಲಿಸಲಾಗಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಟ್ಟಡದ ಒಳಗಿದ್ದ ದಿನೇಶ್ ಕುಮಾರ್ ಅವರಿಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ದಿನೇಶ್ ಕುಮಾರ್ ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರನ್ನು ಪರೀಕ್ಷಿಸಿದ ವೈದ್ಯರು ಗಂಭೀರ ಗಾಯಗಳ ಪರಿಣಾಮ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.






