ಮಣಿಪಾಲ: ಮನೆಯ ಸಮೀಪವಿದ್ದ ತೆಂಗಿನ ಮರದಿಂದ ತೆಂಗಿನಕಾಯಿ ಕೊಯ್ಯುವ ವೇಳೆ ಟೆರೇಸ್ನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ 80 ಬಡಗುಬೆಟ್ಟು ಗ್ರಾಮದ ಶಾಂತಿನಗರದಲ್ಲಿ ನಡೆದಿದೆ.
ಮೃತರನ್ನು ಶಾಂತಿನಗರ ನಿವಾಸಿ ಸದಾಶಿವ (59) ಎಂದು ಗುರುತಿಸಲಾಗಿದೆ.
ಅಕ್ಟೋಬರ್ 30ರಂದು ಮಧ್ಯಾಹ್ನ ಸುಮಾರು 1 ಗಂಟೆಗೆ ಮನೆಯ ಟೆರೇಸ್ ಮೇಲೆ ನಿಂತು ದೋಟಿಯ ಮೂಲಕ ತೆಂಗಿನಕಾಯಿ ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದರು. ಈ ವೇಳೆ ಅವರ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ನವೆಂಬರ್ 2ರಂದು ಬೆಳಿಗ್ಗೆ 6 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಸದಾಶಿವ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.







