ಹಿರಿಯಡ್ಕ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ ನವೆಂಬರ್ 3ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 7ರ ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಪೂರ್ವಾನುಮತಿ ಇಲ್ಲದೆ ಯಾವುದೇ ಸಭೆ, ಮೆರವಣಿಗೆ, ಪ್ರತಿಭಟನೆ ಅಥವಾ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ, ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಸಾರ್ವಜನಿಕ ಶಾಂತಿಗೆ ಭಂಗ ತರುವ ಚಟುವಟಿಕೆಗಳಲ್ಲಿ ತೊಡಗುವುದು, ಪ್ರಚೋದನಕಾರಿ ಭಾಷಣ ಹಾಗೂ ಘೋಷಣೆಗಳನ್ನು ಕೂಗುವುದು ಮತ್ತು ಅಪಾಯಕಾರಿ ವಸ್ತುಗಳನ್ನು ಕೊಂಡೊಯ್ಯುವುದು ಅಥವಾ ಸಂಗ್ರಹಿಸುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆಯ ಅವಧಿಯಲ್ಲಿ ಸಾರ್ವಜನಿಕರು ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.







